Home ಕ್ರೈಂ ಸುದ್ದಿಗಳು ಬಾವಿಗೆ ಬಿದ್ದ ವಾಹನ; ೮ ಮಂದಿ ದುರ್ಮರಣ

ಬಾವಿಗೆ ಬಿದ್ದ ವಾಹನ; ೮ ಮಂದಿ ದುರ್ಮರಣ

ಮುಂಬೈ, ಜೂ.೧೫: ಚಾಲಕನ ನಿಯಂತ್ರಣ ತಪ್ಪಿ ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಮತ್ತು ನಾಲ್ವರು ಮಕ್ಕಳು ಸೇರಿ ಎಂಟು ಮಂದಿ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಮಲ್ಶಿರಾಸ್ ತಹಸಿಲ್‌ನಲ್ಲಿ ನಡೆದಿದೆ. ಘಟನೆಯಲ್ಲಿ ಏಳು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


ಪಂಡರಾಪುರ ಮೂಲದ ೧೫ ಜನರು ಮಾಸ್ವಾಡ್‌ನ ದೇವಸ್ಥಾನಕ್ಕೆ ಭೇಟಿ ನೀಡಿ ಹಿಂತಿರುಗುತ್ತಿದ್ದರು. ಈ ವೇಳೆ ತಂಡುಲ್ವಾಡಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಪಿಕಪ್‌ನಲ್ಲಿ ಇದ್ದವರು ಹೆಚ್ಚಿನವರು ಸಂಬಂಧಿಕರು ಮತ್ತು ನೆರೆಹೊರೆಯವರು ಎಂದು ತಿಳಿದುಬಂದಿದೆ.


ಪ್ರಾಥಮಿಕ ಮಾಹಿತಿಯ ಪ್ರಕಾರ, ೧೫ ಜನರನ್ನು ಹೊತ್ತೊಯ್ಯುತ್ತಿದ್ದ ಪಿಕ್-ಅಪ್ ವಾಹನವು ಭಾನುವಾರ ಸಂಜೆ ೫ ಗಂಟೆ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿ, ರಸ್ತೆಬದಿಯ ಜಮೀನಿಗೆ ನುಗ್ಗಿ ಬಾವಿಗೆ ಬಿದ್ದಿದೆ. ಇದರಿಂದಾಗಿ ೮ ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸೋಲಾಪುರದ ಪೊಲೀಸ್ ವರಿಷ್ಠಾಧಿಕಾರಿ ಅತುಲ್ ಕುಲಕರ್ಣಿ ತಿಳಿಸಿದ್ದಾರೆ.


ಅಪಘಾತದಲ್ಲಿ ಮೃತಪಟ್ಟವರಿಗೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಸ್ಥರಿಗೆ ೫ ಲಕ್ಷ ರೂ. ಪರಿಹಾರ ಘೊಷಿಸಿದ್ದಾರೆ.ಸೋಲಾಪುರ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಅಪಘಾತ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಸೀಲನೆ ನಡೆಸಿದ್ದಾರೆ.