
ಆಳಂದ:
ತಾಲೂಕಿನ ಹಳ್ಳಿಸಲಗರ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ತೀವ್ರವಾಗುತ್ತಿದ್ದು, 15 ದಿನಕ್ಕೊಮ್ಮೆ ಮಾತ್ರ ನೀರು ಪೂರೈಕೆಯಾಗುತ್ತಿರುವುದರಿಂದ ಗ್ರಾಮಸ್ಥರು ಹನಿ ನೀರಿಗೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಮಸ್ಯೆ ಪರಿಹರಿಸುವಂತೆ ಹಲವು ಬಾರಿ ಮನವಿ ಮಾಡಿದರೂ ಅಧಿಕಾರಿಗಳು ಸ್ಪಂದಿಸಿಲ್ಲ ಎಂದು ಆರೋಪಿಸಿ ರೊಚ್ಚಿಗೆದ್ದ ಗ್ರಾಮಸ್ಥರು ಶುಕ್ರವಾರ ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು.
ಗ್ರಾಮದಲ್ಲಿ ನೀರು ಸಂಗ್ರಹಿಸಲು ಮೂರು ಟ್ಯಾಂಕ್ಗಳಿದ್ದು, ಎರಡು ಕೊಳವೆಬಾವಿ ಹಾಗೂ ಎರಡು ತೆರೆದ ಬಾವಿಗಳಿವೆ. ಆದರೆ ನೀರಿನ ಕೊರತೆಯಿಂದ ಮೂರು ಬಾವಿಗಳು ಬತ್ತಿಹೋಗಿದ್ದು, ಒಂದು ಕೊಳವೆಬಾವಿಯಲ್ಲಿ ಮಾತ್ರ ನೀರು ಲಭ್ಯವಾಗುತ್ತಿದೆ. ಇರುವ ನೀರನ್ನು ಸಮರ್ಪಕವಾಗಿ ಸಂಗ್ರಹಿಸಿ ನಿರ್ವಹಿಸಿದರೆ ಕನಿಷ್ಠ ಎರಡು ದಿನಕ್ಕೊಮ್ಮೆ ಗ್ರಾಮಕ್ಕೆ ನೀರು ಪೂರೈಸಲು ಸಾಧ್ಯವಿದೆ. ಆದರೆ ನೀರು ನಿರ್ವಹಣೆಯಲ್ಲಿ ಸಮರ್ಪಕ ಕ್ರಮ ಕೈಗೊಳ್ಳದ ಪರಿಣಾಮ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ.
ಕುಡಿಯುವ ನೀರಿನ ಸಮಸ್ಯೆ ಕುರಿತು ಆಡಳಿತಾಧಿಕಾರಿ ಹಾಗೂ ಪಿಡಿಒ ಅವರಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಸರ್ಕಾರ ಕುಡಿಯುವ ನೀರಿಗಾಗಿ ಅನುದಾನ ಒದಗಿಸುತ್ತಿದೆ ಎಂದು ಹೇಳುತ್ತಿದ್ದರೂ, ಗ್ರಾಮ ಪಂಚಾಯಿತಿಯಲ್ಲಿ ಅನುದಾನವಿಲ್ಲ, ನೀರಿನ ವ್ಯವಸ್ಥೆಗಾಗಿ ಕರ ವಸೂಲಿ ಮಾಡಿ ಬಳಸಿಕೊಳ್ಳಬೇಕು ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಈ ಬಾರಿ ಮುಂಗಾರು ಹಾಗೂ ಹಿಂಗಾರು ಮಳೆ ಕೈಕೊಟ್ಟಿರುವುದರಿಂದ ಗ್ರಾಮದಲ್ಲಿ ಬರದ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದೆ. ರೈತರು ಬಿತ್ತನೆ ಮಾಡಿದ ಬೆಳೆಗಳು ಒಣಗಿಹೋಗಿದ್ದು, ಕೃಷಿಯಿಂದ ಆದಾಯವಿಲ್ಲದೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಜನರಿಗೇ ಕುಡಿಯಲು ನೀರು ಸಿಗದ ಸಂದರ್ಭದಲ್ಲಿ ನೀರಿಗಾಗಿ ಕರ ಪಾವತಿಸಿ ಎಂಬ ಅಧಿಕಾರಿಗಳ ಮಾತು ಜನರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.
ಇಷ್ಟೇ ಅಲ್ಲದೆ, ಗ್ರಾಮದಲ್ಲಿ ರಸ್ತೆ, ಚರಂಡಿ ಸೇರಿದಂತೆ ಮೂಲಸೌಲಭ್ಯಗಳ ಸಮಸ್ಯೆಯೂ ಕಾಡುತ್ತಿದೆ. ಚರಂಡಿ ಹಾಗೂ ನಾಲಿಗಳಲ್ಲಿ ಕೊಳಚೆ ಸಂಗ್ರಹವಾಗಿ ದುರ್ವಾಸನೆ ಬೀರುತ್ತಿದ್ದರೂ ಪಂಚಾಯಿತಿ ಸಿಬ್ಬಂದಿ ಸ್ವಚ್ಛತೆಗೆ ಮುಂದಾಗುತ್ತಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.
ಕುಡಿಯುವ ನೀರು ಪೂರೈಕೆಯ ಜವಾಬ್ದಾರಿ ಹೊಂದಿರುವ ಸಿಬ್ಬಂದಿ ಲಭ್ಯವಿರುವ ನೀರನ್ನು ಸಮರ್ಪಕವಾಗಿ ಸಂಗ್ರಹಿಸಿ ವಿತರಣೆ ಮಾಡುತ್ತಿಲ್ಲ ಎಂದು ಆರೋಪಿಸಿರುವ ಗ್ರಾಮಸ್ಥರು, ಸಂಬಂಧಿಸಿದ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರೂ ಸ್ಥಳಕ್ಕೆ ಸಂಬಂಧಿಸಿದ ಅಧಿಕಾರಿಗಳು ಭೇಟಿ ನೀಡಿ ಸಮಸ್ಯೆ ಆಲಿಸದಿರುವುದು ಗ್ರಾಮಸ್ಥರ ಆಕ್ರೋಶವನ್ನು ಮತ್ತಷ್ಟು ಹೆಚ್ಚಿಸಿದೆ.
ಕೂಡಲೇ ಹಳ್ಳಿಸಲಗರ ಗ್ರಾಮಕ್ಕೆ ಅಗತ್ಯ ಪ್ರಮಾಣದ ಕುಡಿಯುವ ನೀರು ಪೂರೈಸಲು ತುರ್ತು ಕ್ರಮ ಕೈಗೊಂಡು, ಶಾಶ್ವತ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಇಲ್ಲವಾದಲ್ಲಿ ಪ್ರತಿಭಟನೆ ಮತ್ತಷ್ಟು ತೀವ್ರಗೊಳಿಸುವುದಾಗಿ ಗ್ರಾಮಸ್ಥರು ಎಚ್ಚರಿಸಿದ್ದಾರೆ.
ರಾಚಣ್ಣಾ ವಾಗ್ದರಗಿ, ವೈಜುನಾಥ ಪಾಟೀಲ್, ಚಾಂದಸಾಬ ಮುಲ್ಲಾ, ಶಿವಶರಣಪ್ಪ ಕುಂಬಾರ, ಬಸವಂತರಾವ ಪಾಟೀಲ್, ಪರಮೇಶ್ವರ ಮಂಠಾಳೆ, ಚಂದ್ರಕಾಂತ ರುದ್ರವಾಡಿ, ಶಿವಣ್ಣ ಶೇರಿಕರ, ಬಸವರಾಜ ಸರಸಂಬಿ, ಹಣಮಂತರ ಹರಳಯ್ಯ, ಅಮೃತ ಚಿಂಚನಸೂರ, ಲಕ್ಷ್ಮೀಕಾಂತ ಮಾಲಿಪಾಟೀಲ್, ಸಂತೋಷ ಶೇರಿಕರ, ಕುಪೇಂದ್ರ ಜವಳಿ ಸೇರಿದಂತೆ ಗ್ರಾಮಸ್ಥರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.























