
ಬೀದರ್, ಜೂ 04 : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-2026)ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಮತದಾರರ ಪಟ್ಟಿಯನ್ನು ಇನ್ನಷ್ಟು ನಿಖರ, ದೋಷರಹಿತ ಹಾಗೂ ಪಾರದರ್ಶಕಗೊಳಿಸುವ ಉದ್ದೇಶ ಹೊಂದಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದ್ದಾರೆ.
ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯ ಅಂಗವಾಗಿ ಮನೆ ಮನೆ ಸಮೀಕ್ಷೆ (House to House Enumeration) ನಡೆಸಲಾಗುವುದು. ಈ ವೇಳೆ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‍ಒ) ಮನೆಗಳಿಗೆ ಭೇಟಿ ನೀಡಿ ಮತದಾರರ ವಿವರಗಳನ್ನು ಸಂಗ್ರಹಿಸಿ ಪರಿಶೀಲಿಸಲಿದ್ದಾರೆ. ಸಂಗ್ರಹಿಸಲಾದ ಮಾಹಿತಿಯ ಆಧಾರದ ಮೇಲೆ ಮತದಾರರ ಪಟ್ಟಿಯ ಪರಿಷ್ಕರಣೆ, ತಿದ್ದುಪಡಿ ಹಾಗೂ ನವೀಕರಣ ಕಾರ್ಯ ಕೈಗೊಳ್ಳಲಾಗುವುದು ಎಂದು ಹೇಳಿದರು.
ಜಿಲ್ಲಾಧಿಕಾರಿಗಳ ಮಾಹಿತಿ ಪ್ರಕಾರ, 2026ರ ಅಕ್ಟೋಬರ್ 1 ಅನ್ನು ಅರ್ಹತಾ ದಿನಾಂಕವಾಗಿ ನಿಗದಿಪಡಿಸಲಾಗಿದೆ. ಜೂನ್ 20ರಿಂದ 29ರವರೆಗೆ ಸಿದ್ಧತೆ ಮತ್ತು ತರಬೇತಿ ಕಾರ್ಯಕ್ರಮ, ಜೂನ್ 30 ರಿಂದ ಜುಲೈ 29ರವರೆಗೆ ಮನೆ ಮನೆ ಸಮೀಕ್ಷೆ, ಆಗಸ್ಟ್ 5 ರಂದು ಕರಡು ಮತದಾರರ ಪಟ್ಟಿ ಪ್ರಕಟಣೆ, ಆಗಸ್ಟ್ 5ರಿಂದ ಸೆಪ್ಟೆಂಬರ್ 4ರವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆ, ಅಕ್ಟೋಬರ್ 3ರ ವರೆಗೆ ಅವುಗಳ ವಿಲೇವಾರಿ ಹಾಗೂ ಅಕ್ಟೋಬರ್ 7 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು.
ಮನೆ ಮನೆ ಸಮೀಕ್ಷೆ ಸಂದರ್ಭದಲ್ಲಿ ಹೊಸದಾಗಿ ಮತದಾನಕ್ಕೆ ಅರ್ಹರಾಗಿರುವವರ ಹೆಸರು ಸೇರ್ಪಡೆ, ಸ್ಥಳಾಂತರಗೊಂಡ ಮತದಾರರ ವಿವರಗಳ ನವೀಕರಣ, ಮೃತರ ಹೆಸರುಗಳ ತೆರವು ಸೇರಿದಂತೆ ಅಗತ್ಯ ತಿದ್ದುಪಡಿಗಳನ್ನು ಕೈಗೊಳ್ಳಲಾಗುವುದು. ಮತದಾರರು ಅಗತ್ಯ ದಾಖಲೆಗಳನ್ನು ಒದಗಿಸಿ ಬಿಎಲ್‍ಒಗಳಿಗೆ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದರು.
ಕರಡು ಮತದಾರರ ಪಟ್ಟಿ ಪ್ರಕಟವಾದ ಬಳಿಕ ಸಾರ್ವಜನಿಕರು ತಮ್ಮ ಹೆಸರು, ವಿಳಾಸ ಹಾಗೂ ಇತರ ವಿವರಗಳಲ್ಲಿ ಯಾವುದೇ ದೋಷಗಳಿದ್ದಲ್ಲಿ ನಿಗದಿತ ಅವಧಿಯಲ್ಲಿ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ. ಸಲ್ಲಿಕೆಯಾಗುವ ಅರ್ಜಿಗಳನ್ನು ಪರಿಶೀಲಿಸಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
2025ರ ಜನವರಿ 6 ರಂದು ಪ್ರಕಟಗೊಂಡ ಅಂತಿಮ ಮತದಾರರ ಪಟ್ಟಿ ಪ್ರಕಾರ, ಬೀದರ್ ಜಿಲ್ಲೆಯಲ್ಲಿ ಒಟ್ಟು 1,528 ಮತಗಟ್ಟೆಗಳು ಕಾರ್ಯನಿರ್ವಹಿಸುತ್ತಿದ್ದು, 740,462 ಪುರುಷ ಮತದಾರರು ಇದ್ದು, 7059,83 ಮಹಿಳಾ ಮತದಾರರು ಸೇರಿದಂತೆ ಒಟ್ಟು 14,46,445 ಮತದಾರರು ದಾಖಲಾಗಿದ್ದಾರೆ ಎಂದು ಮಾಹಿತಿ ನೀಡಿದರು.
ಮತದಾರರ ಪಟ್ಟಿ ಪರಿಷ್ಕರಣೆ ಪ್ರಜಾಪ್ರಭುತ್ವದ ಅತ್ಯಂತ ಮಹತ್ವದ ಪ್ರಕ್ರಿಯೆಯಾಗಿದ್ದು, ಎಲ್ಲ ಮತದಾರರು, ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಬಿಎಲ್‍ಒಗಳಿಗೆ ಅಗತ್ಯ ಸಹಕಾರ ನೀಡುವ ಮೂಲಕ ಮತದಾರರ ಪಟ್ಟಿಯನ್ನು ಸಂಪೂರ್ಣ, ನಿಖರ ಮತ್ತು ಪಾರದರ್ಶಕಗೊಳಿಸಲು ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.


























