ಯಾದಗಿರಿ:ಜು.೧: ಪ್ರಜಾಪ್ರಭುತ್ವದ ಯಶಸ್ಸು ನಿಖರ ಹಾಗೂ ದೋಷರಹಿತ ಮತದಾರರ ಪಟ್ಟಿಯ ಮೇಲೆ ಅವಲಂಬಿತವಾಗಿದ್ದು, ಪ್ರತಿಯೊಬ್ಬ ಅರ್ಹ ನಾಗರಿಕರು ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಿ ಚುನಾವಣಾ ಆಯೋಗದ ಅಧಿಕಾರಿಗಳೊಂದಿಗೆ ಸಹಕರಿಸಬೇಕು ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಶ್ರೀಧರ ಸಾಹುಕಾರ ಕರೆ ನೀಡಿದರು.
ನಗರದ ವಾರ್ಡ್ ಸಂಖ್ಯೆ-೦೯ರ ಬೂತ್ ಸಂಖ್ಯೆ-೩೬ರಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಅವರು ಮಾತನಾಡಿ, ಮತದಾನದ ಹಕ್ಕು ಕೇವಲ ಸಂವಿಧಾನ ನೀಡಿರುವ ಹಕ್ಕಷ್ಟೇ ಅಲ್ಲ, ರಾಷ್ಟ್ರದ ಆಡಳಿತ ವ್ಯವಸ್ಥೆಯನ್ನು ರೂಪಿಸುವ ಮಹತ್ವದ ಜವಾಬ್ದಾರಿಯೂ ಆಗಿದೆ. ಆದ್ದರಿಂದ ಪ್ರತಿಯೊಬ್ಬ ಅರ್ಹ ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಅಚ್ಚುಕಟ್ಟಾಗಿ ದಾಖಲಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಹೇಳಿದರು.
ಯುವ ಮತದಾರರ ಹೆಸರು ಸೇರ್ಪಡೆ, ವಿಳಾಸ ಬದಲಾವಣೆ, ವಿವರಗಳ ತಿದ್ದುಪಡಿ ಹಾಗೂ ಮತಕ್ಷೇತ್ರ ವರ್ಗಾವಣೆ ಸೇರಿದಂತೆ ಅಗತ್ಯ ಸೇವೆಗಳನ್ನು ಚುನಾವಣಾ ಆಯೋಗದ ನಿಯಮಾವಳಿಯಂತೆ ಬೂತ್ ಮಟ್ಟದ ಅಧಿಕಾರಿಗಳ (ಬಿಎಲ್‌ಒ) ಮೂಲಕ ಸುಲಭವಾಗಿ ಪಡೆಯಬಹುದಾಗಿದೆ. ಸಾರ್ವಜನಿಕರು ಅಗತ್ಯ ದಾಖಲೆಗಳೊಂದಿಗೆ ಅಧಿಕಾರಿಗಳನ್ನು ಸಂಪರ್ಕಿಸಿ ಯಾವುದೇ ಲೋಪಗಳಿಗೆ ಅವಕಾಶ ನೀಡದೆ ತಮ್ಮ ಮಾಹಿತಿಯನ್ನು ಪರಿಶೀಲಿಸಿಕೊಳ್ಳಬೇಕು ಎಂದು ತಿಳಿಸಿದರು.
ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಚುನಾವಣಾ ಆಯೋಗ ನಡೆಸುತ್ತಿರುವ ಈ ವಿಶೇಷ ಅಭಿಯಾನಕ್ಕೆ ಸಮಾಜದ ಎಲ್ಲ ವರ್ಗದ ಜನರು ಸಕಾರಾತ್ಮಕವಾಗಿ ಸ್ಪಂದಿಸುವ ಅಗತ್ಯವಿದೆ. ರಾಜಕೀಯ ಪಕ್ಷಗಳ ಕಾರ್ಯಕರ್ತರು ಜಾಗೃತಿ ಮೂಡಿಸುವುದು, ಮತದಾರರಿಗೆ ಮಾಹಿತಿ ನೀಡುವುದು ಹಾಗೂ ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ಮಾರ್ಗದರ್ಶನ ನೀಡಬಹುದು. ಆದರೆ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ಹೆಸರು ತೆಗೆದುಹಾಕುವುದು ಅಥವಾ ಅಂತಿಮ ನಿರ್ಧಾರ ಕೈಗೊಳ್ಳುವ ಸಂಪೂರ್ಣ ಅಧಿಕಾರ ಚುನಾವಣಾ ಆಯೋಗದ ಅಧಿಕಾರಿಗಳಿಗೆ ಮಾತ್ರ ಸೇರಿದ್ದು, ಈ ಪ್ರಕ್ರಿಯೆ ಸಂಪೂರ್ಣ ಪಾರದರ್ಶಕ ಹಾಗೂ ಸಂವಿಧಾನಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದರು.
ಮತದಾರರ ಪಟ್ಟಿಯಲ್ಲಿ ನಿಖರ ಮಾಹಿತಿ ದಾಖಲಾಗಿರುವುದು ಮುಂಬರುವ ಚುನಾವಣೆಯಲ್ಲಿ ಮತದಾನದ ಹಕ್ಕು ಚಲಾಯಿಸಲು ಅತ್ಯಂತ ಅವಶ್ಯಕವಾಗಿದ್ದು, ಯಾವುದೇ ನಿರ್ಲಕ್ಷ್ಯಕ್ಕೆ ಅವಕಾಶ ನೀಡದೆ ಪ್ರತಿಯೊಬ್ಬ ನಾಗರಿಕರು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶ್ರೀಧರ ಸಾಹುಕಾರ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಮೇಲ್ವಿಚಾರಕರಾದ ರವಿಚಂದ್ರ ನಾಯ್ಕಲ್, ಬೂತ್ ಮಟ್ಟದ ಅಧಿಕಾರಿಗಳಾದ ಅಶ್ವಿನಿ ಶ್ರೀನಿವಾಸ ಚಾಮನಹಳ್ಳಿ ಹಾಗೂ ಮಂಜುನಾಥ ಗುತ್ತೇದಾರ, ನಗರಸಭೆಯ ಮಾಜಿ ಉಪಾಧ್ಯಕ್ಷೆ ಪ್ರಭಾವತಿ ಮಾರುತಿ ಕಲಾಲ್, ವಿನೋದ ಪಡಿಶೆಟ್ಟಿ, ಮಲ್ಲು ಕೋಲಿವಾಡ, ಮಲ್ಲುಗೌಡ ಪಾಟೀಲ್, ಆನಂದ್ ಸಾಹುಕಾರ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.





























