ಸರ್ಕಾರಿ ಗೌರವಗಳೊಂದಿಗೆ ವೃಕ್ಷ ಮಾತೆ ಅಂತ್ಯಕ್ರಿಯೆ

ಗೃಹ ಸಚಿವ ಡಾ. ಜಿ.ಪರಮೇಶ್ವರ್, ಸಚಿವ ಈಶ್ವರ್ ಖಂಡ್ರೆ ಸೇರಿದಂತೆ ಗಣ್ಯರು ನಿನ್ನೆ ನಿಧನರಾದ ವೃಕ್ಷಮಾತೆ ಸಾಲಮರದ ತಿಮ್ಮಕ್ಕನವರ ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಮರ್ಪಿಸಿದರು.

ಬೆಂಗಳೂರು, ನ. ೧೫- ನಿನ್ನೆ ನಿಧನರಾದ ಪದ್ಮಶ್ರೀ ಪುರಸ್ಕೃತೆ ವೃಕ್ಷ ಮಾತೆ, ಸಾಲುಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆ ಜ್ಞಾನಭಾರತೀಯ ಕಲಾ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ನೆರವೇರಿತು.


೧೧೪ ವರ್ಷದ ಸಾಲು ಮರದ ತಿಮ್ಮಕ್ಕ ಅನಾರೋಗ್ಯ ಸಮಸ್ಯೆಯಿಂದ ೨ ದಿನಗಳ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದರು.


ತಿಮ್ಮಕ್ಕ ಅವರ ಪಾರ್ಥಿವ ಶರೀರವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನಕ್ಕಾಗಿ ಅವಕಾಶ ಕಲ್ಪಿಸಲಾಗಿತ್ತು. ಗೃಹ ಸಚಿವ ಡಾ. ಜಿ. ಪರಮೇಶ್ವರ್, ಅರಣ್ಯ ಸಚಿವ ಈಶ್ವರ ಖಂಡ್ರೆ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಅರ್. ಅಶೋಕ್, ಕೇಂದ್ರ ಸಚಿವೆ ಶೋಭಾಕರಂದ್ಲಾಜೆ, ಸೇರಿದಂತೆ ಗಣ್ಯರು ಅಂತಿಮ ದರ್ಶನ ಪಡೆದು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.


ಬಳಿಕ ವೃಕ್ಷ ಮಾತೆ ತಿಮ್ಮಕ್ಕನವರ ಪಾರ್ಥಿವ ಶರೀರವನ್ನು ಕಲಾಗ್ರಾಮಕ್ಕೆ ಕೊಂಡೊಯ್ದು ಗಣ್ಯರ ಸಮ್ಮುಖದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಯಿತು.


ಸಾಲಮರದ ತಿಮ್ಮಕ್ಕ ಅವರಿಗೆ ಮಕ್ಕಳಿರಲಿಲ್ಲ. ಸಸಿಗಳನ್ನು ಮಕ್ಕಳಂತೆ ಬೆಳೆಸಿ ಪರಿಸರ ಸಂರಕ್ಷಣೆಗೆ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದರು. ರಾಜ್ಯಾದ್ಯಂತ ೮ ಸಾವಿರಕ್ಕೂ ಹೆಚ್ಚು ಮರಗಳನ್ನು ಬೆಳೆಸಿದ್ದಾರೆ. ತಿಮ್ಮಕ್ಕನವರು ಮಾಗಡಿ ತಾಲ್ಲೂಕಿನಲ್ಲಿ ೪.೫ ಕಿಮೀ ಉದ್ದಕ್ಕೂ ೩೮೫ ಆಲದ ಮರಗಳನ್ನು ನೆಟ್ಟು ಬೆಳೆಸುವ ಮೂಲಕ ಪರಿಸರ ಪ್ರೇಮ ಮೆರೆದಿದ್ದಾರೆ. ಅಕ್ಷರಸ್ಥರಿಲ್ಲದಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಸಾಲುಮರದ ತಿಮ್ಮಕ್ಕ ಮಾಡಿದ ಸಾಧನೆ ಎಲ್ಲರಿಗೂ ಮಾದರಿಯಾಗಿದೆ.