
ಗುಬ್ಬಿ, ಅ. ೩- ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯ್ತಿಗಳಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ವಯೋನಿವೃತ್ತಿ ಹೊಂದಿದ ಆರ್.ಎಸ್. ನಟರಾಜು ಅವರಿಗೆ ಆತ್ಮೀಯವಾಗಿ ಬೀಳ್ಕೊಡುಗೆ ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ನಿವೃತ್ತ ಪಿಡಿಒ ಆರ್.ಎಸ್. ನಟರಾಜು, ಸರ್ಕಾರಿ ಸೇವೆಯಲ್ಲಿ ಹಲವು ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿದ ಸಂದರ್ಭದಲ್ಲಿ ಸಹೋದ್ಯೋಗಿಗಳು, ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ನೀಡಿದ ಸಹಕಾರವನ್ನು ಸ್ಮರಿಸಿದರು. ಸೇವಾವಧಿಯಲ್ಲಿ ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿ ಕರ್ತವ್ಯ ನಿರ್ವಹಿಸಲು ಎಲ್ಲರ ಸಹಕಾರ ಕಾರಣವಾಗಿದೆ. ನಿವೃತ್ತಿಯ ನಂತರವೂ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ತಮ್ಮ ಕೈಲಾದ ಸೇವೆ ಸಲ್ಲಿಸುವುದಾಗಿ ಹೇಳಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜೆ.ಬಿ. ರಂಗನಾಥ್ ಮಾತನಾಡಿ, ಸರ್ಕಾರಿ ಸೇವೆಯಲ್ಲಿ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದ್ದು, ಸೇವಾವಧಿಯಲ್ಲಿ ಪ್ರಾಮಾಣಿಕತೆ, ಶಿಸ್ತು ಹಾಗೂ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿದ ಅಧಿಕಾರಿಗಳ ಸೇವೆ ಸದಾ ಸ್ಮರಣೀಯವಾಗಿರುತ್ತದೆ. ನಟರಾಜು ಅವರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ ಸಲ್ಲಿಸಿರುವ ಸೇವೆ ಮೆಚ್ಚುವಂತಹದ್ದು. ಅವರ ಮುಂದಿನ ನಿವೃತ್ತ ಜೀವನ ಸುಖ, ಸಂತೋಷ ಹಾಗೂ ಆರೋಗ್ಯದಿಂದ ಕೂಡಿರಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಯೋಜನಾಧಿಕಾರಿ ಎಂ.ಜೆ. ಜಗನ್ನಾಥಗೌಡ ಸೇರಿದಂತೆ ತಾಲ್ಲೂಕು ಪಂಚಾಯಿತಿ ಸಿಬ್ಬಂದಿ, ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳ ಪಿಡಿಒಗಳು, ಕಾರ್ಯದರ್ಶಿ ಗ್ರೇಡ್?೧ ಮತ್ತು ೨, ಎಸ್ಡಿಎಎ ಸಿಬ್ಬಂದಿ, ಗ್ರಾಮ ಪಂಚಾಯಿತಿ ಸಿಬ್ಬಂದಿ, ಹಾಗೂ ಸ್ನೇಹ ಬಳಗದವರು ಭಾಗವಹಿಸಿದ್ದರು.


























