
ಕಲಬುರಗಿ, ನ.19: ದೇವರು ದೇಹಕ್ಕμÉ್ಟೀ ಸಣ್ಣ ಕಷ್ಟ ಕೊಟ್ಟಿದ್ದಾನೆಯೇ ಹೊರತು ಮನಸ್ಸಿಗೆ ಕೊಟ್ಟಿಲ್ಲ. ಮನಸ್ಸು ಮಾಡಿದರೆ ವಿಕಲಚೇತನರು ಯಾವುದಕ್ಕೂ ಕಮ್ಮಿಯಿಲ್ಲ, ಇಚ್ಛಾಶಕ್ತಿಯಿದ್ದರೆ ಏನು ಬೇಕಾದರೂ ಸಾಧಿಸಬಹುದು ಎಂದು ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಹೇಳಿದರು.
ಮಂಗಳವಾರ ನಗರದ ಚಂದ್ರಶೇಖರ ಪಾಟೀಲ್ ಜಿಲ್ಲಾ ಕ್ರೀಡಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಶ್ರಮಿಸುತ್ತಿರುವ ಎಲ್ಲಾ ಸ್ವಯಂ ಸೇವಾ ಸಂಘ ಸಂಸ್ಥೆಗಳು ಹಾಗೂ ಎಂ.ಆರ್. ಡಬ್ಲ್ಯೂ, ಯು.ಆರ್.ಡಬ್ಲ್ಯೂ, ವಿ. ಆರ್.ಡಬ್ಲ್ಯೂ ಇವರುಗಳ ಸಂಯುಕ್ತಾಶ್ರಯದಲ್ಲಿ 2026ನೇ ಸಾಲಿನ ವಿಶ್ವ ವಿಕಲಚೇತನರ ದಿನಾಚರಣೆ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಉದ್ಘಾಟಿಸಿ ಚಾಲನೆ ನೀಡಿ ಮಾತನಾಡಿ ಅವರು, ದೈನಂದಿನ ಕೆಲಸದ ಒತ್ತಡಗಳ ನಡುವೆಯೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದು ತಮಗೆ ಅತೀವ ಖುಷಿ ತಂದಿದೆ ಹಾಗೂ ಜೀವನದ ಮೇಲಿನ ಉತ್ಸಾಹವನ್ನು ಹೆಚ್ಚಿಸಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಸ್ಪರ್ಧೆಯಲ್ಲಿ ಗೆಲ್ಲುವುದಕ್ಕಿಂತ ಹೆಚ್ಚಾಗಿ ಉತ್ಸಾಹದಿಂದ ಭಾಗವಹಿಸುವುದೇ ನಿಜವಾದ ಗೆಲುವು. ಎಲ್ಲರೂ ಕ್ರೀಡಾ ಸ್ಫೂರ್ತಿಯಿಂದ ಪಾಲ್ಗೊಳ್ಳಬೇಕು. ಸ್ಪರ್ಧಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಆರೋಗ್ಯ ಇಲಾಖೆಯಿಂದ ಪ್ರಥಮ ಚಿಕಿತ್ಸಾ ಕಿಟ್, ಎನರ್ಜಿ ಡ್ರಿಂಕ್ಸ್ ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ತಿಳಿಸಿದರು.
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ಸಾದಿಕ್ ಹುಸೇನ್ ಖಾನ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, 2026ರ ಸಾಲಿನಲ್ಲಿ ರಾಜ್ಯದಲ್ಲೇ ಪ್ರಪ್ರಥಮ ಬಾರಿಗೆ ಕಲಬುರಗಿ ಜಿಲ್ಲೆಯಲ್ಲಿ ವಿಕಲಚೇತನ ಕ್ರೀಡಾಪಟುಗಳಿಗೆ ಈ ರೀತಿಯ ಕ್ರೀಡೆಗಳನ್ನು ಆಯೋಜಿಸಿ ಚಾಲನೆ ನೀಡುತ್ತಿರುವುದು ವಿಶೇಷವಾಗಿದೆ. ಜಿಲ್ಲಾಡಳಿತದ ಸಂಪೂರ್ಣ ಸಹಕಾರದಿಂದ ಈ ಕ್ರೀಡಾಕೂಟವನ್ನು ಯಶಸ್ವಿಗೊಳಿಸಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ರಾಜಶೇಖರ್ ಗೋನಾಯಕ್, ವಿಜಯಲಕ್ಷ್ಮಿ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಅಧ್ಯಕ್ಷ ಲಿಂಗರಾಜ್ ತಾರ್ಫೆಲ್, ವಿನಾಯಕ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಶ್ರೀಮಂತ ರೇವೂರ್, ಫ್ಯಾಷನ್ ಎನ್.ಜಿ.ಒ ಅಧ್ಯಕ್ಷ ಜಾಕೀರ್ ಹುಸೇನ್, ಸಿದ್ಧಾರ್ಥ್ ಕೋರ್ವಾರ, ರಾಜು ಶಕಾಪುರ, ಡಾ. ಲೋಕೇಶ್, ವೆಂಕಟೇಶ್ ಪಾಟೀಲ್ ಉಪಸ್ಥಿತರಿದ್ದರು.




















