Home ಜಿಲ್ಲೆ ಹಾಲಿನ ಉತ್ಪನ್ನ, ಬಸ್ ದರ ಏರಿಕೆ ಹಿಂಪಡೆಯಿರಿ

ಹಾಲಿನ ಉತ್ಪನ್ನ, ಬಸ್ ದರ ಏರಿಕೆ ಹಿಂಪಡೆಯಿರಿ

ಬೀದರ್: ರಾಜ್ಯ ಸರ್ಕಾರ ಹಾಲಿನ ಉತ್ಪನ್ನ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳ ಪ್ರಯಾಣ ದರ ಏರಿಕೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ಪಾಟೀಲ ಹಾರೂರಗೇರಿ ಆಗ್ರಹಿಸಿದ್ದಾರೆ.
ಬರಗಾಲದಿಂದಾಗಿ ರಾಜ್ಯದ ಜನ ಸಂಕಷ್ಟದಲ್ಲಿದ್ದಾರೆ. ಈ ಮಧ್ಯೆ ಸರ್ಕಾರ ಕರ್ನಾಟಕ ಹಾಲು ಮಹಾ ಮಂಡಳದ ಹಾಲು, ಮೊಸರು, ತುಪ್ಪ ಹಾಗೂ ಇತರ ಹಾಲಿನ ಉತ್ಪನ್ನಗಳ ಬೆಲೆಯನ್ನು ರೂ. ೮ ರಿಂದ ರೂ. ೩೫ ರ ವರೆಗೆ ಹಾಗೂ ಬಸ್ ಪ್ರಯಾಣ ದರವನ್ನು ಶೇ ೨೩ ರಷ್ಟು ಏರಿಕೆ ಮಾಡಿರುವುದು ಆಘಾತ ಉಂಟು ಮಾಡಿದೆ ಎಂದು ತಿಳಿಸಿದ್ದಾರೆ.
ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಬಡ, ಕೆಳ ಮಧ್ಯಮ ಹಾಗೂ ಮಧ್ಯಮ ವರ್ಗದ ಕುಟುಂಬಗಳ ಮೇಲೆ ಹಾಲು ಹಾಗೂ ಬಸ್ ದರ ಹೆಚ್ಚಳ ಮತ್ತಷ್ಟು ಆರ್ಥಿಕ ಹೊರೆ ಹೊರೆಸಿದೆ ಎಂದು ದೂರಿದ್ದಾರೆ.
ಹಾಲಿನ ಉತ್ಪನ್ನಗಳಿಗೆ ಜನಸಾಮಾನ್ಯರಿಗೆ ಹೊರೆಯಾಗದಂತೆ ದರ ನಿಗದಿ ಮಾಡಬೇಕು. ಬರಗಾಲದ ಹಿನ್ನೆಲೆಯಲ್ಲಿ ಬಸ್ ಪ್ರಯಾಣ ದರ ಹೆಚ್ಚಳ ತಡೆ ಹಿಡಿಯಬೇಕು. ಬರ ಪೀಡಿತ ರೈತರು, ಗ್ರಾಮೀಣ ಕುಟುಂಬಗಳು ಹಾಗೂ ಜಾನುವಾರು ಸಾಕಾಣಿಕೆದಾರರಿಗೆ ವಿಶೇಷ ಪರಿಹಾರ ಘೋಷಿಸಬೇಕು. ಜನಸಾಮಾನ್ಯರಿಗೆ ಶುದ್ಧ ಕುಡಿಯುವ ನೀರು, ಜಾನುವಾರುಗಳ ಮೇವು ಮತ್ತು ನೀರಿನ ಲಭ್ಯತೆಯನ್ನು ಖಚಿತಪಡಿಸಬೇಕು. ಅಕ್ಕಿ, ಸಕ್ಕರೆ, ಬೇಳೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ನಿಯಂತ್ರಣಕ್ಕೆ ತುರ್ತು ಕ್ರಮ ಕೈಗೊಳ್ಳಬೇಕು. ಬಡ, ಕೆಳ ಮಧ್ಯಮ ಹಾಗೂ ಮಧ್ಯಮ ವರ್ಗದ ಜನರ ಹಿತಾಸಕ್ತಿ ರಕ್ಷಿಸುವ ನಿಟ್ಟಿನಲ್ಲಿ ಬೆಲೆ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.