Home ಜಿಲ್ಲೆ ಬೆಂಗಳೂರು ಸಮಗ್ರ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಪ್ರಮುಖ

ಸಮಗ್ರ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಪ್ರಮುಖ

Oplus_16908288

ವಿಜಯಪುರ.ಅ.೭- ಬದಲಾಗುತ್ತಿರುವ ಕಾಲಘಟ್ಟದಲ್ಲಿ ಮಹಿಳೆಯರು ಸಬಲರಾಗಿ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸ್ವಾವಲಂಬಿಗಳಾಗುತ್ತಿದ್ದಾರೆ. ಕುಟುಂಬದ ನಿರ್ವಹಣೆ, ಮಕ್ಕಳ ಶಿಕ್ಷಣ, ಆರೋಗ್ಯ ಕಾಳಜಿ ಸೇರಿದಂತೆ ಕುಟುಂಬದ ಸಮಗ್ರ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ದಿನೇಶ್ ಕುಮಾರ್ ಹೇಳಿದರು.


ಹೋಬಳಿಯ ಮಂಡಿ ಬೆಲೆ ಗ್ರಾಮದ ಹಾಲಿನ ಡೇರಿಯಲ್ಲಿ, ಧನಲಕ್ಷ್ಮಿ ಜ್ಞಾನವಿಕಾಸ ಕೇಂದ್ರದ ವತಿಯಿಂದ ಆಯೋಜಿಸಿದ್ದ ಐದನೇ ವರ್ಷದ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಹಾಗೂ ಸಬಲರನ್ನಾಗಿ ಮಾಡುವ ಉದ್ದೇಶದಿಂದ ಸ್ತ್ರೀ ಸ್ವಸಹಾಯ ಸಂಘಗಳ ಮೂಲಕ ಹಲವು ಸ್ವಉದ್ಯೋಗ ಯೋಜನೆಗಳನ್ನು ರೂಪಿಸಲಾಗಿದೆ. ಹೈನುಗಾರಿಕೆ, ಟೈಲರಿಂಗ್, ಬ್ಯೂಟಿಷಿಯನ್ ಸೇರಿದಂತೆ ವಿವಿಧ ಸ್ವಉದ್ಯೋಗಗಳಲ್ಲಿ ತೊಡಗಿಸಿಕೊಳ್ಳಲು ಮಹಿಳೆಯರಿಗೆ ಪ್ರೋತ್ಸಾಹ ಹಾಗೂ ಮಾರ್ಗದರ್ಶನ ನೀಡಲಾಗುತ್ತಿದೆ. ಸ್ವಸಹಾಯ ಸಂಘಗಳ ಸದಸ್ಯರಾಗುವುದರಿಂದ ಮಹಿಳೆಯರು ಆರ್ಥಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರ ಜೊತೆಗೆ ಕುಟುಂಬ ನಿರ್ವಹಣೆ, ಆರೋಗ್ಯ, ಮಕ್ಕಳ ಶಿಕ್ಷಣ ಸೇರಿದಂತೆ ಹಲವಾರು ವಿಷಯಗಳ ಕುರಿತು ಅರಿವನ್ನು ಪಡೆಯುತ್ತಿದ್ದಾರೆ ಎಂದು ತಿಳಿಸಿದರು.


ಸಮಾರಂಭದ ಅಂಗವಾಗಿ ಕೇಂದ್ರದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಕ್ರೀಡಾಕೂಟ ಆಯೋಜಿಸಲಾಗಿತ್ತು. ಮಹಿಳೆಯರು ಉತ್ಸಾಹದಿಂದ ಪಾಲ್ಗೊಂಡು ಕಾರ್ಯಕ್ರಮಕ್ಕೆ ಮೆರುಗು ತಂದರು.
ಕಾರ್ಯಕ್ರಮದಲ್ಲಿ ತಾಲೂಕಿನ ಜ್ಞಾನವಿಕಾಸ ಸಮನ್ವಯಾಧಿಕಾರಿ ಉಷಾರಾಣಿ, ಸೇವಾ ಪ್ರತಿನಿಧಿ ದೀಪ, ಮೇಲ್ವಿಚಾರಕ ಉಮೇಶ್ ಸೇರಿದಂತೆ ಕೇಂದ್ರದ ಸದಸ್ಯರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿಬ್ಬಂದಿ ಇದ್ದರು.