
ಬೆಂಗಳೂರು, ಜೂ. ೧೩- ಜನಪರ ಮತ್ತು ಜನಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಅಧಿಕಾರಿಗಳು ನಿರ್ಲಕ್ಷ್ಯತೆ ತೋರದೆ ಹೆಚ್ಚು ಬದ್ಧತೆಯಿಂದ ಕೆಲಸ ಮಾಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ತಾಕೀತು ಮಾಡಿದರು.
ರಾಜ್ಯದ ಮುಖ್ಯಮಂತ್ರಿಯಾದ ನಂತರ ಆಡಳಿತ ಯಂತ್ರಕ್ಕೆ ವೇಗ ನೀಡಲು ಮುಂದಾಗಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಜಿ.ಪಂ. ಸಿಇಓಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ವಿವಿಧ ಇಲಾಖೆ ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳ ಸಭೆ ನಡೆಸಿ ಆಡಳಿತ ಸುಗಮ, ಸಮರ್ಪಕ ಹಾಗೂ ಜನಪರ ಆಡಳಿತಕ್ಕೆ ಸಂಬಂಧಿಸಿದಂತೆ ಕೆಲವು ನಿರ್ದಿಷ್ಟ ಸಲಹೆ, ಸೂಚನೆಗಳನ್ನು ಅಧಿಕಾರಿಗಳಿಗೆ ನೀಡಿದರು.
ರಾಜ್ಯ ಸರ್ಕಾರ ಬಡವರು, ಹಿಂದುಳಿದವರು, ದಮನಿತರ ಕಲ್ಯಾಣಕ್ಕಾಗಿ ಹತ್ತು ಹಲವು ಯೋಜನೆಗಳನ್ನು ಜಾರಿ ಮಾಡಿದೆ. ಬಜೆಟ್‌ನಲ್ಲೂ ಹೊಸ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ. ಈ ಎಲ್ಲಾ ಯೋಜನೆಗಳು ಸಮರ್ಪಕವಾಗಿ ಜಾರಿಯಾಗುವಂತೆ ನೋಡಿಕೊಳ್ಳಬೇಕು ಹಾಗೂ ಯಾರಿಗೆ ಯೋಜನೆಗಳನ್ನು ರೂಪಿಸಲಾಗಿದೆಯೇ ಆ ಯೋಜನೆಗಳ ಲಾಭ ಆ ವರ್ಗದವರಿಗೆ ಆಗುವಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳು ಸೂಚಿಸಿದರು.
ಯಾವುದೇ ಕಾರಣಕ್ಕೂ ಅಧಿಕಾರಿಗಳು ಜನಪರ ಯೋಜನೆಗಳ ಜಾರಿ ವಿಚಾರದಲ್ಲಿ ವಿಳಂಬ ಧೋರಣೆ ತಾಳದೆ ಶೀಘ್ರ ಅನುಷ್ಠಾನಕ್ಕೆ ಕ್ರಮ ವಹಿಸಬೇಕು ಎಂದು ಅವರು ಹೇಳಿದರು.
ಯಾವುದೇ ಅಧಿಕಾರಿ ಜನರ ಕಷ್ಟಗಳಿಗೆ ಸ್ಪಂದಿಸಬೇಕು. ಜನರ ಕಷ್ಟಗಳಿಗೆ ಸ್ಪಂದಿಸದೆ ಜನ ಕಲ್ಯಾಣ ಯೋಜನೆಗಳ ಜಾರಿ ವಿಚಾರದಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಅವರು ನೀಡಿದರು.
ದೂರದ ಊರುಗಳಿಂದ ಸಣ್ಣಪುಟ್ಟ ಸಮಸ್ಯೆಗಳನ್ನು ಹೊತ್ತು ಜನ ಬೆಂಗಳೂರಿಗೆ ಬರುವುದನ್ನು ತಪ್ಪಿಸಿ, ಜಿಲ್ಲಾಧಿಕಾರಿಗಳು ಜನರ ಬಳಿಗೆ ಹೋಗಿ ಅವರ ಸಮಸ್ಯೆಗಳನ್ನು ಆಲಿಸಿ ಪರಿಹಾರ ದೊರಕಿಸಬೇಕು ಎಂದು ಸೂಚಿಸಿದರು.
ತಾಲ್ಲೂಕು, ಹೋಬಳಿ ಮಟ್ಟದಲ್ಲಿ ಜನಸ್ಪಂದನ ಸಭೆಗಳನ್ನು ನಡೆಸುವ ಮೂಲಕ ಜನರ ಅಹವಾಲು ಆಲಿಸುವ ಕೆಲಸ ಅಧಿಕಾರಿಗಳು ಮಾಡಬೇಕು. ಹಾಗೆಯೇ ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸುವ ಕೆಲಸವೂ ಆಗಬೇಕಿದೆ ಎಂದು ಹೇಳಿದರು.
ಆಡಳಿತ ಯಂತ್ರ ಇನ್ನು ಹೆಚ್ಚು ಚುರುಕಿನಿಂದ ಕೆಲಸ ಮಾಡಬೇಕಿದೆ. ಹಾಗಾಗಿ ಅಧಿಕಾರಿಗಳು ಹೆಚ್ಚು ಜವಾಬ್ದಾರಿಯಿಂದ ಕೆಲಸ ಮಾಡುವ ಮೂಲಕ ಸರ್ಕಾರಕ್ಕೆ ಒಳ್ಳೆಯ ಹೆಸರು ತರಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜನರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಿದರೆ ನಿಮಗೂ ಹೆಸರು, ಸರ್ಕಾರಕ್ಕೂ ಹೆಸರು ಬರುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಿ. ಏನು ಮಾಡಿದರೂ ನಡೆದೀತು ಎಂಬ ಧೋರಣೆ ಬೇಡ ಎಂದರು.
ಕಾನೂನು ಸುವ್ಯವಸ್ಥೆ: ಎಚ್ಚರ ವಹಿಸಿ
ಕರ್ನಾಟಕ ಸರ್ವಜನಾಂಗದ ಶಾಂತಿಯ ತೋಟವಾಗಿದೆ. ಈ ಶಾಂತಿಯ ತೋಟವನ್ನು ಮುಂದುವರೆಸಿಕೊಂಡು ಹೋಗಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಳ್ಳಿ. ಸಮಾಜಘಾತುಕ ಶಕ್ತಿಗಳು ತಲೆಎತ್ತದಂತೆ ಕಾರ್ಯನಿರ್ವಹಿಸಿ ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜನಸಾಮಾನ್ಯರಿಗೆ ಅನಗತ್ಯ ತೊಂದರೆ ಕೊಡಬೇಡಿ. ಅವರ ಜತೆ ಬಹಳ ಸಂಯಮ, ಸೌಜನ್ಯದಿಂದ ವರ್ತಿಸಿ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು.
ಕಂದಾಯ ಇಲಾಖೆ ಮತ್ತಷ್ಟು ಜನಪರವಾಗಬೇಕು. ಈ ಇಲಾಖೆ ರೈತರು ಮತ್ತು ಜನಸಾಮಾನ್ಯರಿಗೆ ನೇರ ಸಂಬಂಧಪಟ್ಟ ಇಲಾಖೆಯಾಗಿದ್ದು, ನಿಯಮಗಳ ನೆಪ ಹೇಳಿ ಯಾವುದನ್ನು ವಿಳಂಬ ಮಾಡಬೇಡಿ. ಭೂ ಪರಿವರ್ತನೆ ಇರಬಹುದು, ಭೂ ಮಂಜೂರಾತಿ ಇರಬಹುದು, ಖಾತೆ, ಪೋಡಿ ವಿಚಾರದಲ್ಲೂ ಅತ್ಯಂತ ಕ್ಷಿಪ್ರವಾಗಿ ಕೆಲಸಗಳು ಆಗಬೇಕು. ವಿಳಂಬ ಧೋರಣೆಯಾದರೆ ಅದನ್ನು ನಾನು ಸಹಿಸಲ್ಲ ಎಂದು ಹೇಳಿದರು.
ಸಭೆಯಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಸಚಿವರುಗಳಾದ ಕೆ.ಎಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ಪ್ರಿಯಾಂಕ ಖರ್ಗೆ, ಸತೀಶ್ ಜಾರಕಿಹೊಳಿ, ಯು.ಟಿ.ಖಾದರ್, ಈಶ್ವರ್ ಖಂಡ್ರೆ, ಯತೀಂದ್ರ ಸಿದ್ದರಾಮಯ್ಯ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು, ಜಿಲ್ಲಾಧಿಕಾರಿಗಳು ಭಾಗವಹಿಸಿದ್ದರು.
ರಸಗೊಬ್ಬರ, ಬಿತ್ತನೆ ಬೀಜ ಕೊರತೆ ನೀಗಿಸಿ
ರಾಜ್ಯದಲ್ಲಿ ಮುಂಗಾರು ಹಂಗಾಮು ಆರಂಭವಾಗಿ ಕೃಷಿ ಚಟುವಟಿಕೆಗಳಿಗೆ ಅಗತ್ಯವಾದ ರಸಗೊಬ್ಬರ ಹಾಗೂ ಬಿತ್ತನೆ ಬೀಜದ ಕೊರತೆಯಾಗದಂತೆ ಎಚ್ಚರ ವಹಿಸಿ. ಹಾಗೆಯೇ ರಸಗೊಬ್ಬರ ಸಮಸ್ಯೆಯಿಂದ ಕಾನೂನು ಸುವ್ಯವಸ್ಥೆಗೆ ತೊಂದರೆಯಾಗದಂತೆಯೂ ಎಚ್ಚರ ವಹಿಸಿ ಅಧಿಕಾರಿಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದರು.
ಕೇಂದ್ರದಿಂದ ಬರಬೇಕಾದ ರಸಗೊಬ್ಬರ ಪ್ರಮಾಣ ಕಡಿಮೆ ಬಂದಿದೆ. ಹಾಗಾಗಿ ಮುಂದೆ ರಸಗೊಬ್ಬರ ಕೊರತೆಯಾಗದಂತೆ ಈಗಿನಿಂದಲೇ ಏನೆಲ್ಲಾ ಮಾಡಬೇಕೋ ಆ ಕ್ರಮಗಳನ್ನು ಕೈಗೊಳ್ಳಿ, ರಸಗೊಬ್ಬರಕ್ಕಾಗಿ ರೈತರು ಹೋರಾಟದ ಹಾಡಿ ಹಿಡಿದು ಕಾನೂನು ಸುವ್ಯವಸ್ಥೆಗೆ ಧಕ್ಕೆ ತರದಂತೆ ಎಚ್ಚರ ವಹಿಸಿ ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.
ರಾಜ್ಯದ ಕೆಲ ಜಲಾಶಯಗಳಲ್ಲಿ ನೀರಿನ ಕೊರತೆಯಾಗಿದೆ. ಹಾಗಾಗಿ ರಾಜ್ಯದ ಯಾವುದೇ ಕಡೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಮುಂದಿನ ದಿನಗಳಲ್ಲಿ ಹೆಚ್ಚು ಮಳೆಯಾದರೆ ಮಳೆಯಿಂದ ಯಾವುದೇ ಅವಘಡಗಳಾಗದಂತೆ ಈಗಿನಿಂದಲೇ ಕ್ರಮ ವಹಿಸಿ ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.




























