
ಕಲಬುರಗಿ,ಆ.13-ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಅಂಗವಾಗಿ ನಗರದ ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಜಂತುಹುಳು ನಿವಾರಣಾ ದಿನದ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮವನ್ನು ಮಾನ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶರಣಬಸಪ್ಪ ಕ್ಯಾತನಾಳ ಉದ್ಘಾಟಿಸಿ ಮಾತನಾಡಿದರು. ಜಂತುಹುಳಿನ ಬಾಧೆಯಿಂದ ಮಕ್ಕಳ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳನ್ನು ತಡೆಗಟ್ಟಲು ನಿಯಮಿತವಾಗಿ ಜಂತುಹುಳು ನಿವಾರಕ ಮಾತ್ರೆ ಸೇವಿಸುವುದು ಹಾಗೂ ವೈಯಕ್ತಿಕ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು ಅತ್ಯಂತ ಅಗತ್ಯವಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರ್‍ಸಿಎಚ್ ಅಧಿಕಾರಿಗಳಾದ ಡಾ.ಸಿದ್ದು ಪಾಟೀಲ್, ಜಿಲ್ಲಾ ಸಂಯೋಜಕರಾದ ಶಿವಕುಮಾರ್ ಕಾಂಬಳೆ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ದೇವನಗೌಡ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಜಾಗೀರ್ದಾರ್ ಸೇರಿದಂತೆ ಆರೋಗ್ಯ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಮಹತ್ವ, ಜಂತುಹುಳಿನ ಬಾಧೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳು ಹಾಗೂ ಅಲ್ಬೆಂಡಜೋಲ್ ಮಾತ್ರೆಯ ಸೇವನೆಯ ಮಹತ್ವ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು. ಜಂತುಹುಳು ನಿವಾರಣಾ ಮಾತ್ರೆಯನ್ನು ಆರೋಗ್ಯ ಇಲಾಖೆಯ ಮಾರ್ಗಸೂಚಿಯಂತೆ ಸೇವಿಸುವ ಮೂಲಕ ಮಕ್ಕಳಲ್ಲಿ ಜಂತುಹುಳಿನ ಬಾಧೆಯನ್ನು ನಿಯಂತ್ರಿಸಬಹುದು ಎಂದು ತಿಳಿಸಲಾಯಿತು.
ವಿದ್ಯಾರ್ಥಿಗಳು ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡು ವೈಯಕ್ತಿಕ ಸ್ವಚ್ಛತೆ, ಕೈಗಳ ಸ್ವಚ್ಛತೆ ಹಾಗೂ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವಂತೆ ಕರೆ ನೀಡಲಾಯಿತು. ಆರೋಗ್ಯ ಮತ್ತು ಶಿಕ್ಷಣ ಇಲಾಖೆಗಳ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.































