
ಯಾದಗಿರಿ:ಏ.17: ಜಿಲ್ಲೆ ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಸಮೀಪ ಶುಕ್ರವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ದುರಂತವಾಗಿ ಸಾವನ್ನಪ್ಪಿದ ಘಟನೆ ಆತಂಕ ಮೂಡಿಸಿದೆ. ವಿಆರ್‍ಎಲ್ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕ್ಷಣಾರ್ಧದಲ್ಲಿ ಎರಡೂ ವಾಹನಗಳಿಗೆ ಬೆಂಕಿ ತಗುಲಿ ಭಾರೀ ಅನಾಹುತ ಸಂಭವಿಸಿದೆ.
ಡಿಕ್ಕಿಯ ತೀವ್ರತೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಸ್ಥಳದಲ್ಲೇ ಸಜೀವ ದಹನಗೊಂಡಿದ್ದು, ಗುರುತಿಸಲು ಸಹ ಸಾಧ್ಯವಾಗದ ಸ್ಥಿತಿಗೆ ದೇಹಗಳು ಕರಕಲಾಗಿದೆ ಎಂದು ತಿಳಿದುಬಂದಿದೆ. ಬಸ್ ಕೂಡ ಬೆಂಕಿಗಾಹುತಿಯಾಗಿದ್ದು, ಪ್ರಯಾಣಿಕರಲ್ಲಿ ಭೀತಿಯ ವಾತಾವರಣ ಉಂಟಾಯಿತು.
ಘಟನೆಯ ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳ ಹಾಗೂ ಪೆÇಲೀಸರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಸ್ಥಳೀಯರು ಸಹ ರಕ್ಷಣಾ ಕಾರ್ಯದಲ್ಲಿ ಕೈಜೋಡಿಸಿದರು. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ.
ಮೃತರನ್ನು ಕೃಷ್ಣಾ ನಾಯಕ(52),ಅನಂತ ಕಲಾ ಗಂಡ ಕೃಷ್ಣಾ ನಾಯಕ(45),ಶರಣಪ್ಪ(36).ನಿಸರ್ಗ ಗಂಡ ಶರಣಪ್ಪ(30),ಸಿದ್ದಾರ್ಥ ಶರಣಪ್ಪ(03) ಹಾಗೂ ಶಶಿಕಲಾ (30) ಎಂದು ಗುರುತಿಸಲಾಗಿದೆ. ಅದ್ವಿಕಾ ತಂದೆ ಶರಣಪ್ಪ(05) ಹಾಗೂ ಶ್ರೀನಿಧಿ ತಂದೆ ಶರಣಪ್ಪ(1.5 ವರ್ಷ) ಎಂಬ ಮಕ್ಕಳ ಪರಿಸ್ಥಿತಿ ಚಿಂತಾಜಕವಾಗಿದ್ದು,ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.ಬಸ್ ನಲ್ಲಿದ್ದ ಎಲ್ಲಾ 20 ಪ್ರಯಾಣಿಕರು ಸುರಕ್ಷಿತಾಗಿದ್ದಾರೆ ಎನ್ನಲಾಗಿದೆ.
ಘಟನೆ ನಡೆದ ಸ್ಥಳಕ್ಕೆ ಸುರಪುರ ಶಾಸಕ ರಾಜಾ ವೇಣುಗೋಪಾಲ್ ನಾಯಕ ಹಾಗೂ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ (ಎಸ್‍ಪಿ) ಪೃತ್ವಿಕ್ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಧಿಕಾರಿಗಳೊಂದಿಗೆ ಚರ್ಚಿಸಿ ರಕ್ಷಣಾ ಕಾರ್ಯ ಹಾಗೂ ತನಿಖೆ ತ್ವರಿತಗೊಳಿಸುವಂತೆ ಸೂಚನೆ ನೀಡಿದರು.
ಅಪಘಾತದ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಹೆಚ್ಚಿನ ವೇಗ, ನಿರ್ಲಕ್ಷ್ಯ ಚಾಲನೆ ಅಥವಾ ತಾಂತ್ರಿಕ ದೋಷವೇ ಕಾರಣವಾಗಿರಬಹುದು ಎಂದು ಪೆÇಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿದಿದೆ.
ಈ ದಾರುಣ ಘಟನೆ ಸ್ಥಳೀಯರಲ್ಲಿ ದುಃಖದ ಛಾಯೆ ಮೂಡಿಸಿದೆ.




















