
ಯಾದಗಿರಿ:ಮೇ.೨೬: ಗುರುಮಠಕಲ್ ಮತಕ್ಷೇತ್ರದಲ್ಲಿ ತೀವ್ರವಾಗಿ ಕಾಡುತ್ತಿರುವ ಕುಡಿಯುವ ನೀರಿನ ಅಭಾವ, ನಿರಂತರ ವಿದ್ಯುತ್ ವ್ಯತ್ಯಯ, ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ, ಪಂಚಾಯಿತಿಗಳಲ್ಲಿ ಪಿಡಿಒಗಳ ಗೈರುಹಾಜರಿ ಹಾಗೂ ಓವರ್‌ಲೋಡ್ ಬೂದಿ ಲಾರಿಗಳ ಹಾವಳಿಯಿಂದ ಹದಗೆಟ್ಟ ರಸ್ತೆಗಳ ಕುರಿತು ಶಾಸಕ ಶರಣಗೌಡ ಕಂದಕೂರ ಅವರು ಜಿಲ್ಲಾಡಳಿತದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಯಾದಗಿರಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ರಾಹುಲ್ ತುಕಾರಾಂ ಪಾಂಡವೇ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಲವೀಶ್ ಒರಡಿಯಾ ಅವರನ್ನು ಭೇಟಿ ಮಾಡಿದ ಶಾಸಕರು, ಕ್ಷೇತ್ರದ ಜನರು ಎದುರಿಸುತ್ತಿರುವ ಸಮಸ್ಯೆಗಳ ಕುರಿತಂತೆ ಸುದೀರ್ಘ ಮನವಿ ಸಲ್ಲಿಸಿ ತಕ್ಷಣದ ಕ್ರಮಕ್ಕೆ ಒತ್ತಾಯಿಸಿದರು.
ಕ್ಷೇತ್ರದಲ್ಲಿ ಉಂಟಾಗಿರುವ ನೀರಿನ ಅಭಾವಕ್ಕೆ ಜೆಸ್ಕಾಂ ಅಧಿಕಾರಿಗಳ ಬೇಜವಾಬ್ದಾರಿತನ ಮತ್ತು ನಿರಂತರ ವಿದ್ಯುತ್ ವ್ಯತ್ಯಯವೇ ಪ್ರಮುಖ ಕಾರಣ ಎಂದು ಆರೋಪಿಸಿದ ಶಾಸಕರು, ಹಲವಾರು ಬಡಾವಣೆಗಳಲ್ಲಿ ಕುಡಿಯುವ ನೀರಿನ ತೀವ್ರ ಸಂಕಷ್ಟ ನಿರ್ಮಾಣವಾಗಿರುವುದರಿಂದ ಸಾರ್ವಜನಿಕರಿಗೆ ಟ್ಯಾಂಕರ್ ಮೂಲಕ ನೀರು ಪೂರೈಸುವ ಪರಿಸ್ಥಿತಿ ಎದುರಾಗಿರುವುದಕ್ಕೆ ಬೇಸರ ವ್ಯಕ್ತಪಡಿಸಿದರು.
“ನನ್ನ ಶಾಸಕತ್ವದ ಅವಧಿಯಲ್ಲಿ ಜನರಿಗೆ ಟ್ಯಾಂಕರ್ ಮೂಲಕ ನೀರು ಕೊಡುವಂತಹ ದುಸ್ಥಿತಿ ಬಂದಿದೆಯಲ್ಲಾ” ಎಂದು ಭಾವುಕರಾಗಿ ಪ್ರತಿಕ್ರಿಯಿಸಿದ ಶಾಸಕ ಕಂದಕೂರ, ಇಂದಿನ ಆಧುನಿಕ ಯುಗದಲ್ಲಿಯೂ ಜನರು ಮೂಲಭೂತ ಸೌಲಭ್ಯಕ್ಕಾಗಿ ಪರದಾಡುತ್ತಿರುವುದು ಅತ್ಯಂತ ನೋವಿನ ಸಂಗತಿ ಎಂದು ವಿಷಾದಿಸಿದರು. ಮುಂಬರುವ ಮಳೆಗಾಲವನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತ ಹಾಗೂ ಜೆಸ್ಕಾಂ ಅಧಿಕಾರಿಗಳು ತಕ್ಷಣವೇ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಇದೇ ವೇಳೆ ಕ್ಷೇತ್ರದ ರಸ್ತೆ ಸಮಸ್ಯೆಯನ್ನೂ ಜಿಲ್ಲಾಡಳಿತದ ಗಮನಕ್ಕೆ ತಂದ ಶಾಸಕರು, ಮಿತಿ ಮೀರಿ ಬೂದಿ ತುಂಬಿಕೊAಡು ಸಂಚರಿಸುವ ಲಾರಿಗಳಿಂದ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ದೂರಿದರು. ಈ ಕುರಿತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮ ಪಂಚಾಯಿತಿಗಳಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಬೇಕಾದ ಪಿಡಿಒಗಳು ಕಚೇರಿಗಳಲ್ಲೇ ಲಭ್ಯವಿಲ್ಲ. ದೂರು ನೀಡಲು ಹೋದ ಗ್ರಾಮಸ್ಥರಿಗೆ ಅಧಿಕಾರಿಗಳೇ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಿಇಒ ಗಮನಕ್ಕೆ ತಂದ ಶಾಸಕರು, ಸಾರ್ವಜನಿಕರ ಕರೆ ಸ್ವೀಕರಿಸದ ಜೆಸ್ಕಾಂ ಸಿಬ್ಬಂದಿ ಹಾಗೂ ಗೈರುಹಾಜರಾಗುವ ಪಿಡಿಒಗಳ ವಿರುದ್ಧ ಕಠಿಣ ಶಿಸ್ತು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಸುಟ್ಟ ಟ್ರಾನ್ಸ್ಫಾರ್ಮರ್‌ಗಳನ್ನು ೨೪ ಗಂಟೆಯೊಳಗೆ ಬದಲಾಯಿಸುವುದು, ಅಪೂರ್ಣಗೊಂಡಿರುವ ಜೆಜೆಎಂ ಹಾಗೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ಶೀಘ್ರ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಬೇಕೆಂದು ಶಾಸಕರು ಮನವಿ ಮಾಡಿದರು.
ಶಾಸಕರ ಅಹವಾಲುಗಳನ್ನು ಆಲಿಸಿದ ಜಿಲ್ಲಾಧಿಕಾರಿ ರಾಹುಲ್ ಪಾಂಡವೇ ಹಾಗೂ ಸಿಇಒ ಲವೀಶ್ ಒರಡಿಯಾ ಅವರು, ನೀರಿನ ಸಮಸ್ಯೆ, ವಿದ್ಯುತ್ ವ್ಯತ್ಯಯ ಹಾಗೂ ಓವರ್‌ಲೋಡ್ ಬೂದಿ ಲಾರಿಗಳ ಸಂಚಾರ ಕುರಿತು ಸಂಬAಧಪಟ್ಟ ಇಲಾಖೆಗಳ ತುರ್ತು ಸಭೆ ಕರೆದು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಸಾರ್ವಜನಿಕರ ಕರೆಗಳಿಗೆ ಸ್ಪಂದಿಸದ ಹಾಗೂ ಕರ್ತವ್ಯ ನಿರ್ಲಕ್ಷ್ಯ ತೋರುವ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ಜಾರಿ ಮಾಡುವುದಾಗಿಯೂ ತಿಳಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಶುಬಾಸ್ಚಂದ್ರ ಕಟಕಟಿ, ಮುಖಂಡರಾದ ಮಲ್ಲನಗೌಡ ಹಳೆಮನಿ, ರಾಜು ಉಡುಪಿ, ಅಲ್ಲಾವುದ್ದೀನ್, ಲಕ್ಷ್ಮಣ ನಾಯಕ ಕೂಡ್ಲೂರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
“ಜೆಸ್ಕಾಂ ಹಾಗೂ ಪಂಚಾಯಿತಿಗಳಿಗೆ ಬೀಗ ಹಾಕುತ್ತೇವೆ” – ಶಾಸಕ ಶರಣಗೌಡ ಕಂದಕೂರ ಎಚ್ಚರಿಕೆ*
ಕ್ಷೇತ್ರದ ಜನರು ನೀರು ಮತ್ತು ವಿದ್ಯುತ್ ಸಮಸ್ಯೆಯಿಂದ ತೀವ್ರ ಸಂಕಷ್ಟ ಅನುಭವಿಸುತ್ತಿದ್ದರೂ ಸಂಬAಧಪಟ್ಟ ಅಧಿಕಾರಿಗಳು ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದಿಸುತ್ತಿಲ್ಲ. ಅಧಿಕಾರಿಗಳ ಈ ನಿರ್ಲಕ್ಷ್ಯ ಧೋರಣೆ ಇನ್ಮುಂದೆ ಸಹಿಸಲಾಗದು ಎಂದು ಶಾಸಕ ಶರಣಗೌಡ ಕಂದಕೂರ ಎಚ್ಚರಿಕೆ ನೀಡಿದರು.
“ತಕ್ಷಣವೇ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯದಿದ್ದರೆ ಕ್ಷೇತ್ರದ ಜನರನ್ನು ಒಗ್ಗೂಡಿಸಿ ಉಗ್ರ ಪ್ರತಿಭಟನೆ ನಡೆಸಲಾಗುವುದು. ಅಗತ್ಯವಿದ್ದರೆ ಜೆಸ್ಕಾಂ ಕಚೇರಿಗಳು ಹಾಗೂ ಗ್ರಾಮ ಪಂಚಾಯಿತಿಗಳಿಗೆ ಬೀಗ ಹಾಕಿಸಿ ಧರಣಿ ನಡೆಸುವ ಪರಿಸ್ಥಿತಿ ಎದುರಾಗುತ್ತದೆ” ಎಂದು ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.


























