
ಬಂಟ್ವಾಳ: ಕಾಲೇಜಿಗೆ ತೆರಳಲು ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದ ೧೭ ವರ್ಷದ ಅಪ್ರಾಪ್ತ ವಿದ್ಯಾರ್ಥಿನಿಯೋರ್ವಳ ಮೇಲೆ ಯುವಕನೊಬ್ಬ ಮಚ್ಚಿನಿಂದ ಭೀಕರವಾಗಿ ಹಲ್ಲೆ ನಡೆಸಿರುವ ಘಟನೆ ಸೋಮವಾರ ಬೆಳಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮೊಂತಿಮಾರು ಎಂಬಲ್ಲಿ ನಡೆದಿದೆ.
ಬಂಟ್ವಾಳ ಮಂಚಿ ನಿವಾಸಿ ಮೊಹಮ್ಮದ್ ಜೌಹರ್ (೨೮) ಕೃತ್ಯ ಎಸಗಿದ ಆರೋಪಿಯಾಗಿದ್ದಾನೆ.
ಸೋಮವಾರ ಬೆಳಗ್ಗೆ ಸುಮಾರು ೮:೪೫ರ ವೇಳೆಗೆ ಬಾಲಕಿಯು ಮೊಂತಿಮಾರು ಬಸ್ ನಿಲ್ದಾಣದ ಬಳಿ ಕಾಲೇಜಿಗೆ ಹೋಗಲು ಬಸ್ಗಾಗಿ ಕಾಯುತ್ತಿದ್ದಳು. ಈ ವೇಳೆ ಅಲ್ಲಿಗೆ ಧಾವಿಸಿ ಬಂದ ಆರೋಪಿ ಮೊಹಮ್ಮದ್ ಜೌಹರ್, ದಿಢೀರನೆ ಮಚ್ಚಿನಿಂದ ಬಾಲಕಿಯ ತಲೆ ಹಾಗೂ ಕೈಗೆ ಮನಸೋಇಚ್ಛೆ ಹಲ್ಲೆ ನಡೆಸಿದ್ದಾನೆ. ದಾಳಿಯಿಂದಾಗಿ ತೀವ್ರ ರಕ್ತಸ್ರಾವ ಗೊಂಡ ಬಾಲಕಿಯನ್ನು ತಕ್ಷಣವೇ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಬಾಲಕಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ತಿಳಿದುಬಂದಿದೆ.
ವಿದ್ಯಾರ್ಥಿನಿಯ ಮೇಲೆ ಭೀಕರವಾಗಿ ದಾಳಿ ನಡೆಸಿದ ಬಳಿಕ ಆರೋಪಿಯು ನೇರವಾಗಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಸದ್ಯ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದು, ದಾಳಿಗೆ ನಿಖರ ಕಾರಣ ಏನೆಂಬುದರ ಕುರಿತು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.


































