
ನವದೆಹಲಿ,ಆ.8:- ಶನಿವಾರ ದೇಶದ ಹಲವು ಭಾಗಗಳಲ್ಲಿ ಮಾನ್ಸೂನ್ ಮತ್ತೆ ಚುರುಕುಗೊಂಡಿದ್ದು, ವಿವಿಧ ರಾಜ್ಯಗಳಲ್ಲಿ ಬಲವಾದ ಗಾಳಿ ಹಾಗೂ ಸಿಡಿಲು-ಮಿಂಚಿನೊಂದಿಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದೆಹಲಿ-ಎನ್ಸಿಆರ್, ಉತ್ತರಾಖಂಡ, ಹಿಮಾಚಲ ಪ್ರದೇಶ, ಒಡಿಶಾ, ರಾಜಸ್ಥಾನ ಮತ್ತು ಕರ್ನಾಟಕ ಸೇರಿದಂತೆ ಪ್ರಮುಖ ರಾಜ್ಯಗಳಲ್ಲಿ ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಘೋಷಿಸಲಾಗಿದೆ.
ದಕ್ಷಿಣ ಭಾರತದಲ್ಲಿ ಮಾನ್ಸೂನ್ ತೀವ್ರಗೊಂಡಿದ್ದು, ಕರಾವಳಿ ಕರ್ನಾಟಕ ಹಾಗೂ ದಕ್ಷಿಣ ಒಳನಾಡಿನ ಹಲವು ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಭಾರತದಲ್ಲಿ ಮಾನ್ಸೂನ್ ಸಕ್ರಿಯವಾಗಿದ್ದು, ಕರಾವಳಿ ಕರ್ನಾಟಕದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಗಂಟೆಗೆ 40 ರಿಂದ 50 ಕಿಮೀ ವೇಗದಲ್ಲಿ ಬೀಸಲಿರುವ ಬಿರುಗಾಳಿ ಸಹಿತ ಗುಡುಗು-ಮಿಂಚಿನ ಮಳೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ, ಸಮುದ್ರದಲ್ಲಿ ಅಲೆಗಳ ಆರ್ಭಟ ಹೆಚ್ಚಿರಲಿದ್ದು ಮೀನುಗಾರರು ಕಡಲಿಗೆ ತೆರಳದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಕೇರಳ, ತಮಿಳುನಾಡು ಮತ್ತು ಆಂಧ್ರಪ್ರದೇಶದ ಕರಾವಳಿ ಭಾಗಗಳಲ್ಲೂ ಜಲಾವೃತಗೊಳ್ಳುವ ಭೀತಿ ಎದುರಾಗಿದೆ.
ಬಿರುಗಾಳಿ ಸಹಿತ ಗುಡುಗು-ಮಿಂಚಿನ ಮಳೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಸಮುದ್ರದಲ್ಲಿ ವಾತಾವರಣ ಕ್ಷೋಭೆಗೊಳ್ಳಲಿದ್ದು, ಮೀನುಗಾರರು ಕಡಲಿಗೆ ತೆರಳದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ವಾಯುವ್ಯ, ಮಧ್ಯ ಮತ್ತು ಪಶ್ಚಿಮ ಭಾರತದ ಕೊಂಕಣ, ಗೋವಾ, ಮಹಾರಾಷ್ಟ್ರ ಹಾಗೂ ಗುಜರಾತ್ ಭಾಗಗಳಲ್ಲಿಯೂ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಪೂರ್ವ ರಾಜಸ್ಥಾನದಲ್ಲಿ ಅತ್ಯಂತ ಭಾರೀ ಮಳೆಯ ಮುನ್ಸೂಚನೆ ಇದ್ದು, ಹರಿಯಾಣ, ಚಂಡೀಗಢ, ದೆಹಲಿ, ಪೂರ್ವ ಉತ್ತರ ಪ್ರದೇಶ ಮತ್ತು ಪಶ್ಚಿಮ ರಾಜಸ್ಥಾನದ ಪ್ರತ್ಯೇಕ ಪ್ರದೇಶಗಳಲ್ಲಿಯೂ ಮಳೆಯ ಆರ್ಭಟ ಮುಂದುವರಿಯಲಿದೆ. ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಂತಹ ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತ ಮತ್ತು ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗುವ ಅಪಾಯವಿರುವುದರಿಂದ ಜಲಾವೃತಗೊಳ್ಳುವ ಹಾಗೂ ಪ್ರವಾಹ ಭೀತಲಿರುವ ಪ್ರದೇಶಗಳ ಜನರು ಹೆಚ್ಚಿನ ಜಾಗ್ರತೆ ವಹಿಸುವಂತೆ ತಿಳಿಸಲಾಗಿದೆ.
ಪೂರ್ವ ಮತ್ತು ಈಶಾನ್ಯ ಭಾರತದಲ್ಲೂ ಮಳೆಯ ಪ್ರಮಾಣ ಹೆಚ್ಚಾಗಲಿದ್ದು, ಒಡಿಶಾ, ಗಂಗಾ ನದಿ ಪಾತ್ರದ ಪಶ್ಚಿಮ ಬಂಗಾಳ, ಸಿಕ್ಕಿಂ, ಬಿಹಾರ, ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯಗಳಲ್ಲಿ ವ್ಯಾಪಕ ಮಳೆಯ ಮುನ್ಸೂಚನೆ ಇದೆ. ವಿಶೇಷವಾಗಿ ಒಡಿಶಾದಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಸ್ಥಳೀಯ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗುವ ಆತಂಕ ಎದುರಾಗಿದೆ.































