
ತುಮಕೂರು, ನ.೨೯: ಯುವಕರೇ ದೇಶದ ಶಕ್ತಿ. ದೇಶವನ್ನು ಕಟ್ಟುವ ಮತ್ತು ಮುನ್ನಡೆಸುವ ಸಾಮರ್ಥ್ಯ ಯುವಜನತೆಯಲ್ಲಿದೆ. ಯುವಕರಿಗೆ ಕೌಶಲ್ಯ, ಉದ್ಯೋಗ ಹಾಗೂ ನಾಯಕತ್ವದ ಅವಕಾಶಗಳನ್ನು ಕಲ್ಪಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ಜಿ. ಪರಮೇಶ್ವರ ಹೇಳಿದರು.
ನಗರದ ಅಮಾನಿಕೆರೆ ಆವರಣದಲ್ಲಿರುವ ಗಾಜಿನಮನೆಯಲ್ಲಿ ಜಿಲ್ಲಾಡಳಿತ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯೋಜಿಸಿದ್ದ ರಾಜ್ಯಮಟ್ಟದ ಯುವಜನೋತ್ಸವ-೨೦೨೬ ಉದ್ಘಾಟಿಸಿ ಅವರು ಮಾತನಾಡಿದರು.
ಯುವಜನೋತ್ಸವದಂತಹ ಕಾರ್ಯಕ್ರಮಗಳು ಯುವಕರಿಗೆ ನಾಡಿನ ಇತಿಹಾಸ, ಸಾಹಿತ್ಯ, ಸಂಸ್ಕೃತಿ, ಕ್ರೀಡೆ ಮತ್ತು ಪರಂಪರೆಯ ಪರಿಚಯ ಮಾಡಿಸುವುದರ ಜತೆಗೆ ರಾಷ್ಟ್ರೀಯ ಏಕತೆ, ನಾಯಕತ್ವದ ಗುಣ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಲು ನೆರವಾಗುತ್ತವೆ. ಯುವಜನತೆಯಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಡಿಜಿಟಲ್ ಸಾಕ್ಷರತೆ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವ ಅಗತ್ಯವಿದೆ ಎಂದರು.
ದೇಶದ ಜನಸಂಖ್ಯೆಯಲ್ಲಿ ಸುಮಾರು ಶೇ.೬೦ರಷ್ಟು ಮಂದಿ ೧೮ರಿಂದ ೩೫ ವರ್ಷದೊಳಗಿನವರಿದ್ದಾರೆ. ಇಂತಹ ಯುವಶಕ್ತಿಯನ್ನು ಸರಿಯಾದ ದಾರಿಯಲ್ಲಿ ಮುನ್ನಡೆಸುವುದು ಸರ್ಕಾರ ಮತ್ತು ಸಮಾಜದ ಜವಾಬ್ದಾರಿಯಾಗಿದೆ. ಸ್ವಾಮಿ ವಿವೇಕಾನಂದರು ಯುವಕರ ಶಕ್ತಿಯ ಮೇಲೆ ಅಪಾರ ನಂಬಿಕೆ ಹೊಂದಿದ್ದರು. ಅವರ ಆಶಯದಂತೆ ಯುವಕರಿಗೆ ಸೂಕ್ತ ಅವಕಾಶಗಳನ್ನು ಕಲ್ಪಿಸಬೇಕು ಎಂದು ಹೇಳಿದರು.
ದೇಶದಲ್ಲಿ ಪ್ರತಿವರ್ಷ ಸುಮಾರು ೧.೨೦ ಕೋಟಿ ಪದವೀಧರರು ಕಾಲೇಜು ಮತ್ತು ವಿಶ್ವವಿದ್ಯಾಲಯಗಳಿಂದ ಹೊರಬರುತ್ತಿದ್ದಾರೆ. ಆದರೆ ಇವರಲ್ಲಿ ಕೇವಲ ಶೇ.೪೦ರಷ್ಟು ಮಂದಿಗೆ ಮಾತ್ರ ಉದ್ಯೋಗ ದೊರೆಯುತ್ತಿದೆ. ಉಳಿದ ಶೇ.೬೦ರಷ್ಟು ಮಂದಿ ಉದ್ಯೋಗಾವಕಾಶಗಳಿಂದ ವಂಚಿತರಾಗುತ್ತಿದ್ದಾರೆ. ಇದು ಸರ್ಕಾರದ ಮುಂದಿರುವ ದೊಡ್ಡ ಸವಾಲಾಗಿದೆ ಎಂದು ಹೇಳಿದರು.
ಕೇವಲ ಪದವಿ ಪಡೆದರೆ ಉದ್ಯೋಗ ಸಿಗುವುದಿಲ್ಲ. ಉದ್ಯೋಗ ಮಾರುಕಟ್ಟೆಗೆ ಅಗತ್ಯವಾದ ಕೌಶಲ್ಯಗಳನ್ನು ಯುವಕರಿಗೆ ಕಲಿಸುವುದು, ಅವರನ್ನು ಉದ್ಯೋಗಕ್ಕೆ ಸಿದ್ಧಗೊಳಿಸುವುದು ಹಾಗೂ ಸ್ವಯಂ ಉದ್ಯೋಗ ಮತ್ತು ಉದ್ಯಮಶೀಲತೆಗೆ ಪ್ರೋತ್ಸಾಹ ನೀಡುವುದು ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ೨೦೨೩ರಿಂದ ರಾಜ್ಯ ಸರ್ಕಾರ ಉದ್ಯೋಗ ಸೃಷ್ಟಿ ಮತ್ತು ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದರು.
ಕರ್ನಾಟಕದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಸರ್ಕಾರ ಉತ್ತೇಜನ ನೀಡುತ್ತಿದೆ. ಕಳೆದ ವರ್ಷದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಸುಮಾರು ೧೦.೫೬ ಲಕ್ಷ ಕೋಟಿ ಹೂಡಿಕೆಗೆ ಒಪ್ಪಂದಗಳಾಗಿದ್ದು, ಸುಮಾರು ೬.೫ ಲಕ್ಷ ಕೋಟಿ ಹೂಡಿಕೆ ಬಂದಿದೆ. ಇದರಿಂದ ಲಕ್ಷಾಂತರ ಉದ್ಯೋಗಾವಕಾಶಗಳು ಸೃಷ್ಟಿಯಾಗಿವೆ. ೨೦೨೭ರ ಏಪ್ರಿಲ್ನಲ್ಲಿಯೂ ಮತ್ತೊಂದು ಜಾಗತಿಕ ಹೂಡಿಕೆದಾರರ ಸಮಾವೇಶ ಆಯೋಜಿಸಲಾಗುವುದು. ಬೆಂಗಳೂರು ಮಾತ್ರವಲ್ಲದೆ ಬೆಳಗಾವಿ, ಬೀದರ್, ಹುಬ್ಬಳ್ಳಿ-ಧಾರವಾಡ, ಹಾಸನ, ಮಂಗಳೂರು ಮತ್ತು ತುಮಕೂರು ಸೇರಿದಂತೆ ರಾಜ್ಯದ ಎಲ್ಲ ಭಾಗಗಳಲ್ಲೂ ಕೈಗಾರಿಕೆಗಳ ಸ್ಥಾಪನೆಗೆ ಸರ್ಕಾರ ಸಹಕಾರ ನೀಡಲಿದೆ ಎಂದು ತಿಳಿಸಿದರು.
ತುಮಕೂರನ್ನು ಪ್ರಮುಖ ಕೈಗಾರಿಕಾ ಕೇಂದ್ರವನ್ನಾಗಿ ರೂಪಿಸಿ ಸ್ಥಳೀಯ ಯುವಕರಿಗೆ ಉದ್ಯೋಗ ಕಲ್ಪಿಸುವುದು ತಮ್ಮ ಸಂಕಲ್ಪವಾಗಿದೆ. ಜಿಲ್ಲೆಗೆ ಈಗಾಗಲೇ ಹಲವು ಕೈಗಾರಿಕೆಗಳು ಬರಲು ಆಸಕ್ತಿ ತೋರಿವೆ. ಗ್ರೀನ್ ಹೈಡ್ರೋಜನ್ ಮತ್ತು ಡೇಟಾ ಬ್ಯಾಂಕ್ ಕ್ಷೇತ್ರಗಳಲ್ಲಿ ಸುಮಾರು ೩೫ ಸಾವಿರ ಜನರಿಗೆ ಉದ್ಯೋಗ ಕಲ್ಪಿಸುವ ಯೋಜನೆಯಿದೆ. ರಕ್ಷಣಾ ಕ್ಷೇತ್ರಕ್ಕೆ ಸಂಬಂಧಿಸಿದ ಉಪಕರಣಗಳು, ಮದ್ದುಗುಂಡು ಮತ್ತು ಕ್ಷಿಪಣಿಗಳ ತಯಾರಿಕಾ ಘಟಕಗಳನ್ನು ಸ್ಥಾಪಿಸುವ ಬಗ್ಗೆಯೂ ಮುಖ್ಯಮಂತ್ರಿ ಹಾಗೂ ಕಂಪನಿಗಳ ಪ್ರತಿನಿಧಿಗಳೊಂದಿಗೆ ಚರ್ಚಿಸಲಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯಿತಿ ಸಿಇಒ ಅಶ್ವಿಜ, ಅಪರ ಜಿಲ್ಲಾಧಿಕಾರಿ ಡಾ. ತಿಪ್ಪೇಸ್ವಾಮಿ, ಮಹಾನಗರ ಪಾಲಿಕೆ ಆಯುಕ್ತೆ ಶುಭ, ಅಪರ ಪೊಲೀಸ್ ವರಿಷ್ಠಾಧಿಕಾರಿ ಸಿ. ಗೋಪಾಲ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಭರ್ಜರಿ ಚಾಲನೆ
ಬೆಂಗಳೂರು: ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೇಂದ್ರ ರಾಜ್ಯ ಸಚಿವರು ಹಾಗೂ ಬೆಂಗಳೂರು ಉತ್ತರ ಲೋಕಸಭಾ ಸದಸ್ಯರಾದ ಸುಶ್ರೀ ಶೋಭಾ ಕರಂದ್ಲಾಜೆ ಅವರ ನೇತೃತ್ವದಲ್ಲಿ ಆಯೋಜಿಸಲಾಗಿರುವ ’ಬೆಂಗಳೂರು ಉತ್ತರ ಸಂಸದ್ ಕ್ರೀಡಾ ಮಹೋತ್ಸವ – ಖೇಲೋ ಇಂಡಿಯಾ ಬ್ಯಾಡ್ಮಿಂಟನ್ ಪಂದ್ಯಾವಳಿ’ಯನ್ನು ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ. ಗೋಪಾಲಯ್ಯ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂದಿನಿ ಲೇಔಟ್ನ ಯೋಗ ಕೇಂದ್ರದ ಹತ್ತಿರವಿರುವ ಶಟಲ್ ಕಾಕ್ ಇನ್ಡೋರ್ ಸ್ಟೇಡಿಯಂನಲ್ಲಿ ಈ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಕೆ. ಗೋಪಾಲಯ್ಯ ಅವರು, “ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ೨೦೩೬ರ ಕಾಮನ್ವೆಲ್ತ್ ಹಾಗೂ ಒಲಿಂಪಿಕ್ಸ್ ಕ್ರೀಡಾಕೂಟಗಳನ್ನು ದೃಷ್ಟಿಯಲ್ಲಿಟ್ಟುಕೊಂಡು, ಹತ್ತು ವರ್ಷಗಳ ಮುಂಚಿತವಾಗಿಯೇ ದೇಶದ ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ ಕ್ರೀಡಾ ಮಹೋತ್ಸವಗಳ ಮೂಲಕ ಕ್ರೀಡಾಪಟುಗಳಿಗೆ ಅತ್ಯುತ್ತಮ ಪ್ರೋತ್ಸಾಹ ನೀಡುತ್ತಿದ್ದಾರೆ” ಎಂದು ಶ್ಲಾಘಿಸಿದರು. ಕಬಡ್ಡಿ, ವಾಲಿಬಾಲ್, ಬ್ಯಾಡ್ಮಿಂಟನ್ ಸೇರಿದಂತೆ ವಿವಿಧ ಕ್ರೀಡೆಗಳಿಗೆ ಉತ್ತೇಜನ ನೀಡುತ್ತಿರುವ ಕೇಂದ್ರ ಸರ್ಕಾರ ಮತ್ತು ಕ್ಷೇತ್ರದ ಸಂಸದರ ಕಾರ್ಯಕ್ಕೆ ಅವರು ಅಭಿನಂದನೆ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಬೆಂಗಳೂರಿನ ೨೮ ವಿಧಾನಸಭಾ ಕ್ಷೇತ್ರಗಳ ಮಟ್ಟದಲ್ಲಿಯೂ ಇಂತಹ ಕ್ರೀಡಾಕೂಟಗಳನ್ನು ಯಶಸ್ವಿಯಾಗಿ ಆಯೋಜಿಸುವ ಕುರಿತು ಶೀಘ್ರದಲ್ಲೇ ಘೋಷಣೆ ಮಾಡಲಾಗುವುದು ಎಂದು ತಿಳಿಸಿದರು. ಅಲ್ಲದೆ, ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆ ಜಾರಿಯಾಗುತ್ತಿರುವುದು ಹಾಗೂ ಮುಂದಿನ ಕ್ಷೇತ್ರ ವಿಂಗಡಣೆಯಿಂದ ರಾಜ್ಯದಲ್ಲಿ ವಿಧಾನಸಭಾ ಸ್ಥಾನಗಳ ಸಂಖ್ಯೆ ಹೆಚ್ಚಾಗಲಿರುವುದರಿಂದ ಅನೇಕರಿಗೆ ಹೊಸ ಅವಕಾಶಗಳು ಲಭಿಸಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಉದ್ಘಾಟನಾ ಸಮಾರಂಭದಲ್ಲಿ ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾ ಘಟಕದ ಅಧ್ಯಕ್ಷ ಎಸ್. ಹರೀಶ್, ಮಂಡಲದ ಅಧ್ಯಕ್ಷ ಡಾ. ನಾಗೇಂದ್ರ, ಯುವ ಮೋರ್ಚಾ ಅಧ್ಯಕ್ಷ ಡಾ. ಮಂಜುನಾಥ್ ಗೌಡ, ಪ್ರಧಾನ ಕಾರ್ಯದರ್ಶಿಗಳಾದ ನಿಸರ್ಗ ಜಗದೀಶ್, ಅವಿನ್ ಆರಾಧ್ಯ, ಸುರಭಿ ನಾಗರಾಜ್, ಗಂಗಾ ಹನುಮಯ್ಯ, ರಾಜೇಂದ್ರಕುಮಾರ್ ಸೇರಿದಂತೆ ಹಲವು ಸ್ಥಳೀಯ ಮುಖಂಡರು, ಕ್ರೀಡಾಪಟುಗಳು ಹಾಗೂ ಕ್ರೀಡಾ ಅಭಿಮಾನಿಗಳು ಪಾಲ್ಗೊಂಡಿದ್ದರು.






















