
ಸಂಜೆವಾಣಿ ವಾರ್ತೆ
ಹೊಸಪೇಟೆ.ಮೇ. 22 ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ ವಿಜಯನಗರ ಜಿಲ್ಲಾ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ಗುರುವಾರ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿಪತ್ರ ಸಲ್ಲಿಸಿದರು.
ಆರೋಪಿ ವಜಾಕ್ಕೆ ಒತ್ತಾಯ: ಸ್ಥಳೀಯ ಹೊಸಪೇಟೆ ಉಪವಿಭಾಗದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಇತ್ತೀಚೆಗೆ ಜರುಗಿದ ಘಟನೆಯಲ್ಲಿ ಚಿಕಿತ್ಸೆಗೆಂದು ತನ್ನ ತಾಯಿಯೊಂದಿಗೆ ಆಸ್ಪತ್ರೆಗೆ ಬಂದಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜವ್ಯ ಎಸಗಿದ ಘಟನೆ ಜಿಲ್ಲೆಗೆ ದೊಡ್ಡ ಕಳಂಕವಾಗಿದ್ದು. ಪ್ರಕರಣದ ಆರೋಪಿ ಆರೋಗ್ಯ ಇಲಾಖೆ ಸಿಬ್ಬಂದಿ ಅಜೇಯ್ ಮದಕರಿ ಯನ್ನು ಸೇವೆಯಿಂದ ಅಮಾನತುಗೊಳಿಸಿದರೆ ಸಾಲದು ಸೇವೆಯಿಂದಲೇ ಖಾಯಂ ಆಗಿ ವಜಾ ಮಾಡಬೇಕು. ಮತ್ತು ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆರೋಗ್ಯ ಸಚಿವರಿಗೆ ಸಲ್ಲಿಸಲಾದ ಮನವಿಪತ್ರದಲ್ಲಿ ಒತ್ತಾಯಿಸಿದ್ದಾರೆ.
ಶಾಲಾ ಶುಲ್ಕಕ್ಕೆ ಕಡಿವಾಣ ಹಾಕಿ: ಜಿಲ್ಲೆಯ ಸಿಬಿಎಸ್ಸಿ ಸೇರಿದಂತೆ ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿ ಪಾಲಕರಿಂದ ಶಾಲಾ ಆಡಳಿತ ಮಂಡಳಿಗಳು ಅತಿ ಹೆಚ್ಚು ಶುಲ್ಕ ವಸೂಲಾತಿ ಮಾಡುತ್ತಿದ್ದು. ಅದಕ್ಕೆ ಕಡಿವಾಣ ಹಾಕುವಂತೆ ಒತ್ತಾಯಿಸಿದ್ದಾರೆ.
ಶುಲ್ಕ ವಸೂಲಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಜಿಲ್ಲೆಯ ಶಿಕ್ಷಣಾಧಿಕಾರಿಗಳಿಗೆ ಶಾಲಾ ಆಡಳಿತ ಮಂಡಳಿ-ಪೋಷಕರ ಸಭೆ ಕರೆಯಲು ಸೂಚಿಸುವಂತೆ, ಪೋಷಕರಿಗೆ ಹೊರೆ ಆಗದಂತೆ ಶುಲ್ಕ ನಿಗಧಿ ಮಾಡುವಂತೆ, ಶಾಲೆಗಳಲ್ಲಿ ಕೊಠಡಿ, ಮೈದಾನ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳುವಂತೆ, ಡೊನೇಷನ್ ವಿರೋಧಿ ಸಮಿತಿ ರಚಿಸುವಂತೆ, ಅತಿ ಹೆಚ್ಚು ಶುಲ್ಕ ವಸೂಲಿ ಮಾಡುವ ಖಾಸಗಿ ಶಾಲೆಗಳ ಮಾನ್ಯತೆಯನ್ನು ರದ್ದು ಮಾಡುವಂತೆ, ಪೋಷಕರು ದೂರು ನೀಡಿದಾಗ ತ್ವರಿತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳ ಮೂಲಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಸಲ್ಲಿಸಲಾದ ಮನವಿಪತ್ರದಲ್ಲಿ ಒತ್ತಾಯಿಸಲಾಗಿದೆ.
ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಮನವಿಪತ್ರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಡಿವೈಎಫ್ಐ ಜಿಲ್ಲಾಧ್ಯಕ್ಷ ವಿ.ಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಈಡಿಗರ ಮಂಜುನಾಥ, ಉಪಾಧ್ಯಕ್ಷ ತಿರುಕಪ್ಪ, ಎಂ.ಗೋಪಾಲ, ಹನುಮಂತ, ಉಮಾಮಹೇಶ್ವರ್ ಸೇರಿ ಮತ್ತಿತರರು ಇದ್ದರು.






















